ದಾವಣಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಲಗಿದ್ದ ಪತಿಯ ತಲೆಗೆ ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆಗೈದ ಪ್ರಕರಣದಲ್ಲಿ ಪತ್ನಿಗೆ ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕಕೋಗಲೂರು ಗ್ರಾಮದ ರೇಖಾ (36) ಶಿಕ್ಷೆಗೆ ಗುರಿಯಾದ ಮಹಿಳೆ. 2023ರಲ್ಲಿ ತನ್ನ ಪತಿ ಶಾಂತಕುಮಾರ್ ಮೇಲೆ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಆಕೆಯ ಅಪರಾಧ ಸಾಬೀತಾಗಿದೆ.
ರೇಖಾ ಹಾಗೂ ಶಾಂತಕುಮಾರ್ ನಡುವೆ ಆಗಾಗ ಕೌಟುಂಬಿಕ ಕಲಹ ನಡೆಯುತ್ತಿತ್ತು. ಇದೇ ವಿಚಾರವಾಗಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. 2023ರ ಮಾರ್ಚ್ 21ರ ರಾತ್ರಿ ಶಾಂತಕುಮಾರ್ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ರೇಖಾ ಕೊಡಲಿಯಿಂದ ಅವರ ತಲೆಗೆ ಹಲ್ಲೆ ನಡೆಸಿದ್ದಳು.
ಹಲ್ಲೆಯಿಂದ ಶಾಂತಕುಮಾರ್ ತೀವ್ರವಾಗಿ ಗಾಯಗೊಂಡು ರಕ್ತಸ್ರಾವವಾಗಿತ್ತು. ವಿಷಯ ತಿಳಿದ ನೆರೆಹೊರೆಯವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹಲವು ತಿಂಗಳುಗಳ ಕಾಲ ಚಿಕಿತ್ಸೆ ಪಡೆದರೂ ಚೇತರಿಸಿಕೊಳ್ಳದೆ 2023ರ ಆಗಸ್ಟ್ 25ರಂದು ಶಾಂತಕುಮಾರ್ ಮೃತಪಟ್ಟಿದ್ದರು.
ಘಟನೆ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಆರಂಭದಲ್ಲಿ ರೇಖಾ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಬಳಿಕ ಶಾಂತಕುಮಾರ್ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯಲ್ಲಿ ವೈದ್ಯಕೀಯ ದಾಖಲೆಗಳು ಹಾಗೂ ಸಾಕ್ಷಿದಾರರ ಹೇಳಿಕೆಗಳನ್ನು ಪರಿಶೀಲಿಸಲಾಗಿತ್ತು.
ಸಂತೆಬೆನ್ನೂರು ಪೊಲೀಸ್ ವೃತ್ತ ನಿರೀಕ್ಷಕ ಲಿಂಗನಗೌಡ ನೆಗಳೂರು ಪ್ರಕರಣದ ತನಿಖೆ ನಡೆಸಿದ್ದರು. ತನಿಖೆಯ ವೇಳೆ ಸಂಗ್ರಹಿಸಿದ ಸಾಕ್ಷ್ಯಗಳು ಹಾಗೂ ವೈದ್ಯಕೀಯ ದಾಖಲೆಗಳ ಆಧಾರದಲ್ಲಿ ಹಲ್ಲೆಯಿಂದಲೇ ಶಾಂತಕುಮಾರ್ ಮೃತಪಟ್ಟಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೃಷ್ಣಮೂರ್ತಿ ಆರ್. ಪಡಸಲಗಿ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ರೇಖಾಳ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದರು.
ಬಳಿಕ ರೇಖಾಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 2023ರಲ್ಲಿ ನಡೆದಿದ್ದ ಪತಿಯ ಹತ್ಯೆ ಪ್ರಕರಣದಲ್ಲಿ ಇದೀಗ ನ್ಯಾಯಾಲಯದ ತೀರ್ಪು ಹೊರಬಿದ್ದಿದೆ.



