ಬೆಂಗಳೂರು: ಕರ್ನಾಟಕ ಮಿಲ್ಕ್ ಫೆಡರೇಷನ್ (ಕೆಎಂಎಫ್) ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಆಗಿದ್ದು, ಅದರ ನಂದಿನ ಉತ್ಪನ್ನಗಳು ದೇಶ-ವಿದೇಶಗಳಲ್ಲಿ ದೊಡ್ಡ ಮಟ್ಟದಲ್ಲಿ ಮಾರುಕಟ್ಟೆ ಹೊಂದಿವೆ. ಇಂತಹ ಪ್ರತಿಷ್ಠಿತ ಬ್ರ್ಯಾಂಡ್ ಮೇಲೆ ಇದೀಗ ಕಿಡಿಗೇಡಿಗಳ ಕಣ್ಣು ಬಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಡುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ.
ಕೆಎಂಎಫ್ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂದು ಡಾ. ಶರಣ್ಯ ಸಂತೋಷ್ ಎಂಬುವವರ ಹೇಳಿಕೆ ವೈರಲ್ ಆಗಿರುವುದು ಗ್ರಾಹಕರಲ್ಲಿ ಗೊಂದಲ ಮೂಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ಅವರು, ಈ ಆರೋಪ ಸಂಪೂರ್ಣ ಸುಳ್ಳು ಎಂದು ಖಡಕ್ ಸ್ಪಷ್ಟನೆ ನೀಡಿದ್ದಾರೆ.
“ಕೆಎಂಎಫ್ ಉತ್ಪನ್ನಗಳನ್ನು ನೈಸರ್ಗಿಕವಾಗಿ ತಯಾರಿಸಲಾಗುತ್ತದೆ. ಯಾವುದೇ ರೀತಿಯ ಕೆಮಿಕಲ್ ಸೇರಿಸಲಾಗುವುದಿಲ್ಲ. ಇದುವರೆಗೆ ನಮ್ಮ ಉತ್ಪನ್ನಗಳ ಬಗ್ಗೆ ಯಾವುದೇ ದೂರು ಬಂದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ನಿರಾಧಾರ,” ಎಂದು ಅವರು ತಿಳಿಸಿದ್ದಾರೆ.
ಸುಳ್ಳು ಮಾಹಿತಿ ಹಬ್ಬಿಸಿರುವವರ ವಿರುದ್ಧ ಈಗಾಗಲೇ ಕ್ರಿಮಿನಲ್ ಕೇಸ್ ದಾಖಲಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಿ. ಶಿವಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಮುಂದೆಯೂ ಇಂತಹ ಅಪಪ್ರಚಾರ ಮುಂದುವರೆದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಜೊತೆಗೆ ಗ್ರಾಹಕರು ಯಾವುದೇ ಆತಂಕವಿಲ್ಲದೆ ಕೆಎಂಎಫ್ ಉತ್ಪನ್ನಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.
ಇದರ ಜೊತೆಗೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ನಡೆಸಿದ ಪರೀಕ್ಷೆಯಲ್ಲಿ ಕೆಎಂಎಫ್ ಉತ್ಪನ್ನಗಳು ಸಂಪೂರ್ಣ ಸುರಕ್ಷಿತ ಎಂಬ ವರದಿ ಬಂದಿದೆ. ಮೈಸೂರು ಪಾಕ್, ಮಿಲ್ಕ್ ಪೇಡಾ, ಪನ್ನೀರ್, ವೆನಿಲಾ ಮಿಲ್ಕ್ ಶೇಕ್ ಸೇರಿದಂತೆ ಎಲ್ಲಾ ಉತ್ಪನ್ನಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಿವೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.



