ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಕ್ಷೇತ್ರದ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ದೊರೆಯಬಹುದೇ? ಎಂಬ ಪ್ರಶ್ನೆ ಇದೀಗ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರೋಣ ಕ್ಷೇತ್ರಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹದ ಹಿನ್ನೆಲೆಯಲ್ಲಿ ನಡೆದ ಹೋರಾಟಗಳು ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಈ ಚರ್ಚೆಗೆ ಮತ್ತಷ್ಟು ಬಲ ತುಂಬಿವೆ.
ಬಲ್ಲ ಮೂಲಗಳಿಂದ ತಿಳಿದು ಬಂದಿರುವ ಮಾಹಿತಿ ಪ್ರಕಾರ, ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಸಲ್ಲಿಸಿರುವ ಮನವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿಷಯವನ್ನು ಪಕ್ಷದ ಉನ್ನತ ಮಟ್ಟದ ನಾಯಕರ ಗಮನಕ್ಕೆ ತರುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ರೋಣ ಕ್ಷೇತ್ರಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಕಾರ್ಯಕರ್ತರು ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿ ತಮ್ಮ ಬೇಡಿಕೆಯನ್ನು ಪಕ್ಷದ ನಾಯಕರ ಮುಂದಿಟ್ಟಿದ್ದರು. ಇದಕ್ಕೂ ಮುನ್ನ ಕ್ಷೇತ್ರದಲ್ಲಿ ಉರುಳು ಸೇವೆ, ದೀಡ ನಮಸ್ಕಾರ, ಪ್ರತಿಭಟನೆ, ದೇವಸ್ಥಾನ ಹಾಗೂ ಮಸೀದಿಗಳಲ್ಲಿ ವಿಶೇಷ ಪೂಜೆ ಸೇರಿದಂತೆ ವಿವಿಧ ರೀತಿಯ ಹೋರಾಟಗಳು ನಡೆದಿದ್ದವು.
ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲರು ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುದು ಕಾರ್ಯಕರ್ತರ ಪ್ರಮುಖ ಆಗ್ರಹವಾಗಿದೆ. ಕಳೆದ ವಿಧಾನಸಭೆ ಚುನಾವಣೆಯ ನಂತರದಿಂದಲೇ ಈ ಬೇಡಿಕೆ ನಿರಂತರವಾಗಿ ಕೇಳಿಬರುತ್ತಿದೆ.
ಬಲ್ಲ ಮೂಲಗಳ ಪ್ರಕಾರ, ಕೆಪಿಸಿಸಿ ಕಚೇರಿಯಲ್ಲಿ ನಡೆದ ಭೇಟಿಯ ವೇಳೆ ಕಾರ್ಯಕರ್ತರ ಮನವಿಯನ್ನು ಆಲಿಸಿದ ನಾಯಕರು, ಜಿ.ಎಸ್. ಪಾಟೀಲರ ಸಂಘಟನಾ ಅನುಭವ ಹಾಗೂ ಪಕ್ಷದ ಮೇಲಿನ ನಿಷ್ಠೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವ ಸ್ಥಾನ ಹಂಚಿಕೆ ಕುರಿತ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಬೇಕಿರುವುದರಿಂದ ಅಧಿಕೃತ ಘೋಷಣೆ ಹೊರಬೀಳುವವರೆಗೂ ಕಾದು ನೋಡಬೇಕಾಗಿದೆ.
ಈ ಬೆಳವಣಿಗೆಯಿಂದ ಜಿ.ಎಸ್. ಪಾಟೀಲ ಬೆಂಬಲಿಗರಲ್ಲಿ ಹೊಸ ಆಶಾಭಾವನೆ ಮೂಡಿದ್ದು, ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ರೋಣ ಕ್ಷೇತ್ರಕ್ಕೆ ಪ್ರಾತಿನಿಧ್ಯ ದೊರೆಯುವ ನಿರೀಕ್ಷೆ ಹೆಚ್ಚಾಗಿದೆ. ರಾಜಕೀಯ ವಲಯದಲ್ಲೂ ಈ ಕುರಿತು ಚರ್ಚೆಗಳು ಜೋರಾಗಿವೆ.
ಹೈಕಮಾಂಡ್ ಅಂಗಳದಲ್ಲಿ ಚರ್ಚೆ?
“ರೋಣ ಕ್ಷೇತ್ರಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಬೇಕು ಎಂಬುದು ಕಾರ್ಯಕರ್ತರ ಒಕ್ಕೊರಲಿನ ಆಗ್ರಹ. ಈ ಬೇಡಿಕೆಗೆ ಕಾಂಗ್ರೆಸ್ ವರಿಷ್ಠರಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.”



