ಧಾರವಾಡ: ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕಾಲಕಾಲಕ್ಕೆ ಮರುಪರಿಶೀಲನೆ ನಡೆಸುವುದು ಅಗತ್ಯ. ಗೃಹಲಕ್ಷ್ಮಿ ಯೋಜನೆಯಡಿ ಅನರ್ಹರು ಸೌಲಭ್ಯ ಪಡೆಯದಂತೆ ಎಚ್ಚರಿಕೆ ವಹಿಸಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಪ್ರಯೋಜನ ದೊರೆಯುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್.ಆರ್. ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ನೂತನ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನಾ ಅರ್ಜಿಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ತರಬೇತುದಾರರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಜೀವನಮಟ್ಟ ಸುಧಾರಣೆ ಹಾಗೂ ಕುಟುಂಬಗಳ ಆರ್ಥಿಕ ಪರಿಸ್ಥಿತಿಗೆ ನೆರವಾಗುತ್ತಿದೆ. ಕೆಲವು ಫಲಾನುಭವಿಗಳು ಊರು ಬಿಟ್ಟು ಬೇರೆಡೆ ವಾಸಿಸುತ್ತಿರುವುದು ಕಂಡುಬಂದಿದೆ. ಅಂತಹವರ ಪಟ್ಟಿಯನ್ನು ಮರುಪರಿಶೀಲಿಸಿ ನೈಜ ಫಲಾನುಭವಿಗಳನ್ನು ಗುರುತಿಸಬೇಕು. ಆನ್ಲೈನ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲಿಸಿ ಅರ್ಹರಿಗೆ ಮಾತ್ರ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.
ತಹಶೀಲ್ದಾರ್ಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದು ಸೂಚಿಸಿದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದ ಸಮಿತಿ ಸದಸ್ಯರ ಸಹಕಾರದೊಂದಿಗೆ ಗ್ರಾಮಮಟ್ಟದಲ್ಲಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲಾಗುವುದು. ಅಧಿಕಾರಿಗಳು ನಡೆಸುವ ಸಮೀಕ್ಷೆ ಹಾಗೂ ಕಾರ್ಯಗಳ ಮಾಹಿತಿಯನ್ನು ಜನರಿಗೆ ತಲುಪಿಸಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಮಾತನಾಡಿ, ರಾಜಕೀಯ ಭೇದವಿಲ್ಲದೆ ಅರ್ಹತಾ ಮಾನದಂಡ ಪೂರೈಸುವ ಪ್ರತಿಯೊಬ್ಬ ಫಲಾನುಭವಿಗೂ ಯೋಜನೆಯ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸ್ಥಳೀಯ ಕಾರ್ಯಕರ್ತರ ಸಹಕಾರದಿಂದ ಈಗಾಗಲೇ ಸುಮಾರು ಶೇ.90ರಷ್ಟು ಫಲಾನುಭವಿಗಳನ್ನು ಸಂಪರ್ಕಿಸಲಾಗಿದೆ. ಉಳಿದವರನ್ನೂ ತಲುಪಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮರುಪರಿಶೀಲನಾ ಪ್ರಕ್ರಿಯೆ ಸುಮಾರು ಒಂದೂವರೆ ತಿಂಗಳು ನಡೆಯುವ ನಿರೀಕ್ಷೆಯಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯೋಜನಾ ವ್ಯವಸ್ಥಾಪಕ ಓಂಸ್ವಾಮಿ ಚಾವಡಿ ತರಬೇತಿ ನೀಡಿದರು. ಪ್ರೇಮನಾಥ ಚಿಕ್ಕತುಂಬಳ, ರತ್ನಾ ತೇಗೂರಮಠ, ರೇಹಾನ್ ಐನಾಪೂರಿ ಸೇರಿದಂತೆ ವಿವಿಧ ತಾಲೂಕುಗಳ ಅಧ್ಯಕ್ಷರು, ಸಮಿತಿ ಸದಸ್ಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.









