ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಅಕ್ಟೋಬರ್ 29ರವರೆಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದ್ದು, ಮುಂದಿನ ಎರಡು ದಿನಗಳೂ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ, ಉತ್ತರ ಒಳನಾಡಿನಲ್ಲಿ ಹೇಗಿರಲಿದೆ ಹವಾಮಾನ?
ಅಕ್ಟೋಬರ್ 24ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆ ಹಾಗೂ ಬಿರುಗಾಳಿ ಬೀಸುವ ಮುನ್ಸೂಚನೆ ಇದೆ. ಇನ್ನು ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಇರಬಹುದು.
ದಕ್ಷಿಣ ಒಳನಾಡಿನ ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಅ.25 ಮತ್ತು 26ರಂದು ಹಲವೆಡೆ ಮಳೆ ಸಾಧ್ಯತೆ:
ಅಕ್ಟೋಬರ್ 25 ಮತ್ತು 26ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗುವ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಈ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ.
ಅ.29ರವರೆಗೂ ಮಳೆ ಮುನ್ಸೂಚನೆ:
ಅಕ್ಟೋಬರ್ 27, 28 ಮತ್ತು 29ರಂದು ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.









