ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್ ಪಂದ್ಯಾವಳಿ ಆಯೋಜನೆಗೆ ಸಂಬಂಧಿಸಿದಂತೆ ಸಮಿತಿ ನೀಡಿರುವ ಮಾರ್ಗಸೂಚಿಗಳ ಕುರಿತು ಮಹತ್ವದ ಚರ್ಚೆ ನಡೆದಿದೆ.
ಮಾರ್ಗಸೂಚಿಗಳಲ್ಲಿರುವ ಎಲ್ಲಾ ಅಂಶಗಳನ್ನು ಪೂರ್ಣಗೊಳಿಸಿದ ಬಳಿಕ ಗೃಹ ಸಚಿವರು ಹಾಗೂ ಸಮಿತಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಿದ್ದಾರೆ ಎಂದು ಕೆಎಸ್‌ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ. ಐಪಿಎಲ್ ಸೇರಿದಂತೆ ವಿವಿಧ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಕೆಎಸ್‌ಸಿಎ ಹಾಗೂ ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳ ನಡುವೆ ಸಭೆ ನಡೆಯಿತು. ಸಭೆಯಲ್ಲಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಎಂ. ಹಾಕೆ, ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯ ನಂತರ ಮಾತನಾಡಿದ ವಿನಯ್ ಮೃತ್ಯುಂಜಯ, ಗೃಹ ಸಚಿವರು ವಿಶೇಷ ಸಮಿತಿಯನ್ನು ರಚನೆ ಮಾಡಿದ್ದು, ಯಾವುದೇ ಕ್ರಿಕೆಟ್ ಪಂದ್ಯಕ್ಕೂ ಮುನ್ನ ಸಮಿತಿ ಕ್ರೀಡಾಂಗಣವನ್ನು ಪರಿಶೀಲನೆ ನಡೆಸಲಿದೆ ಎಂದು ಹೇಳಿದರು. ಇದೇ ಹಿನ್ನೆಲೆ ಹಲವು ಇಲಾಖೆಗಳೊಂದಿಗೆ ನಿರಂತರವಾಗಿ ಸಭೆ ನಡೆಸಲಾಗುತ್ತಿದೆ. ಇಂದಿನ ಸಭೆಯಲ್ಲಿ ಸಮಿತಿ ನೀಡಿರುವ ಮಾರ್ಗಸೂಚಿಗಳ ಬಗ್ಗೆ ವಿವರವಾಗಿ ಚರ್ಚೆ ಮಾಡಲಾಗಿದೆ. ಎಲ್ಲಾ ಸೂಚನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡ ಬಳಿಕ ಸಮಿತಿಯ ಮುಂದೆ ವಿಷಯವನ್ನು ಇಡಲಾಗುತ್ತದೆ. ನಂತರ ಗೃಹ ಸಚಿವರು ಹಾಗೂ ಸಮಿತಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಬೇಕು ಎಂಬ ಉದ್ದೇಶದಿಂದ ಕೆಎಸ್‌ಸಿಎ ಪ್ರಯತ್ನ ಮುಂದುವರಿಸುತ್ತಿದೆ. ಆದರೆ ಪಂದ್ಯಗಳು ಇಲ್ಲಿ ನಡೆಯುತ್ತವೆಯೋ ಇಲ್ಲವೋ ಎಂಬುದನ್ನು ಈಗಲೇ ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.



