ಪಾಟ್ನಾ: ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ 30 ವರ್ಷದ ಮಹಿಳೆಯೊಬ್ಬರ ಮೃತದೇಹ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಭತ್ತದ ಗದ್ದೆಯಲ್ಲಿ ಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ.
ಮಹಿಳೆಯ ಕೊಲೆಯ ಹಿಂದೆ ಆಕೆಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯ ಕೈವಾಡವಿರಬಹುದು ಎಂದು ಕುಟುಂಬಸ್ಥರು ಶಂಕಿಸಿದ್ದಾರೆ.
ಮೃತ ಮಹಿಳೆಯನ್ನು ಮುಂಗೇರ್ ನಿವಾಸಿ ಉದಯ್ ಕುಮಾರ್ ಅವರ ಪತ್ನಿ ನೀಲು ಕುಮಾರಿ ಎಂದು ಗುರುತಿಸಲಾಗಿದೆ. ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಕುಮಾರ್ ದೇವೇಂದ್ರ ಅವರ ಮಾಹಿತಿ ಪ್ರಕಾರ, ಶನಿವಾರ ಬೆಳಗ್ಗೆ 10ರಿಂದ 10:30ರ ನಡುವೆ ಭತ್ತದ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ.
ನೀಲು ಕುಮಾರಿ ಅವರು ಬಿಹಾರದ ತಿಲಕ್ಪುರ ನಿವಾಸಿ ಅನಕೇಶ್ ಕುಮಾರ್ ಎಂಬ ವ್ಯಕ್ತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಪತಿ ಉದಯ್ ಕುಮಾರ್ ಅವರಿಗೂ ತಿಳಿದಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಉದಯ್ ಕುಮಾರ್, ಸುಮಾರು ಆರು ತಿಂಗಳ ಹಿಂದೆಯೇ ಪತ್ನಿಯ ಸಂಬಂಧದ ವಿಚಾರ ತಿಳಿದಿತ್ತು. ಆದರೆ ಘಟನೆ ನಡೆದ ಸಮಯದಲ್ಲಿ ತಾವು ಸ್ಥಳದಿಂದ ದೂರವಿದ್ದುದಾಗಿ ಹೇಳಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳದಲ್ಲಿದ್ದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮುಂಗೇರ್ ಸದರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಮಹಿಳೆಯ ಹತ್ಯೆಯ ಹಿಂದಿನ ನಿಖರ ಕಾರಣ ಹಾಗೂ ಆರೋಪಿಗಳ ಪಾತ್ರದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.









