ಬೀದರ್: ಗಾಳಿಗೆ ತುಂಡಾಗಿ ಜಮೀನಿನೊಳಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮದಲ್ಲಿ ನಡೆದಿದೆ. ಈ ದುರ್ಘಟನೆಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮೃತ ತುಳಸಮ್ಮ (50) ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಮೀನಿನಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ಅದರ ಸಂಪರ್ಕಕ್ಕೆ ಬಂದಿದ್ದಾರೆ. ಪರಿಣಾಮ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಿದರು.
ಆಸ್ಪತ್ರೆ ಎದುರು ಕುಟುಂಬಸ್ಥರು ಪ್ರತಿಭಟನೆಯ ಸ್ವರ ಎತ್ತಿ, ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದೇ ಸಾವಿಗೆ ಕಾರಣ ಎಂದು ಆರೋಪಿಸಿದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಯ ಸಂಪೂರ್ಣ ವಿವರಗಳನ್ನು ಕಲೆಹಾಕುತ್ತಿದ್ದಾರೆ.



