ಮಂಡ್ಯ: ಮೈಶುಗರ್ ಕಾರ್ಖಾನೆಯ ಬಾಯ್ಲರ್‌ಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕೆ. ಶೆಟ್ಟಿಹಳ್ಳಿ ಗ್ರಾಮದ ಚರಣ್ ಕುಮಾರ್ (33) ಮೃತ ಕಾರ್ಮಿಕ.
ಕಾರ್ಮಿಕನ ಸಾವಿಗೆ ಕಾರ್ಖಾನೆ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಮೃತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಚರಣ್ ಕುಮಾರ್ ಅವರು ಶ್ರೇಯ ಏಜೆನ್ಸಿ ಮೂಲಕ ಗುತ್ತಿಗೆ ಆಧಾರದಲ್ಲಿ ಕಳೆದ ಒಂದೂವರೆ ವರ್ಷದಿಂದ ಮೈಶುಗರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸೆಪ್ಟೆಂಬರ್ 3ರಂದು ಕೆಲಸದ ವೇಳೆ ಬಾಯ್ಲರ್‌ಗೆ ಬಿದ್ದಿದ್ದ ಚರಣ್ ಕುಮಾರ್ ಅವರನ್ನು ಗಂಭೀರ ಗಾಯಗಳೊಂದಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಅವರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ.
ಮೃತ ಕಾರ್ಮಿಕನ ಕುಟುಂಬಕ್ಕೆ ನ್ಯಾಯ ಹಾಗೂ ಸೂಕ್ತ ಪರಿಹಾರ ದೊರೆಯುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಇದೇ ವೇಳೆ, ಕಾರ್ಖಾನೆ ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಮೈಶುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



