ವಿಜಯಸಾಕ್ಷಿ ಸುದ್ದಿ, ಗದಗ:ಗದಗ-ಬೆಟಗೇರಿ ಅವಳಿ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ನಗರದ ಸರ್ವಾಂಗೀಣ ಪ್ರಗತಿಗೆ ವೇಗ ನೀಡಲಾಗುತ್ತಿದೆ ಎಂದು ಶಾಸಕ ಡಾ. ಎಚ್.ಕೆ. ಪಾಟೀಲ ಹೇಳಿದರು.
ಶನಿವಾರ ಅವಳಿ ನಗರದ ವಿವಿಧ ವಾರ್ಡ್‌ಗಳಲ್ಲಿ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ನಗರಸಭೆ ಅನುದಾನದಡಿ ಕೈಗೆತ್ತಿಕೊಳ್ಳಲಾಗಿರುವ ಒಟ್ಟು ₹8.75 ಕೋಟಿ ವೆಚ್ಚದ ರಸ್ತೆ, ಚರಂಡಿ ಹಾಗೂ ಪ್ರಮುಖ ಸಿವಿಲ್ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸಾರ್ವಜನಿಕರ ದೈನಂದಿನ ಸಂಚಾರಕ್ಕೆ ಅನುಕೂಲವಾಗುವಂತೆ ಗುಣಮಟ್ಟದ ರಸ್ತೆ ಹಾಗೂ ಸುಸಜ್ಜಿತ ಚರಂಡಿ ವ್ಯವಸ್ಥೆ ನಿರ್ಮಿಸಲಾಗುತ್ತಿದೆ. ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಬೆಟಗೇರಿ ಭಾಗದ ಪ್ರಮುಖ ಏಳು ವಾರ್ಡ್‌ಗಳಲ್ಲಿ ತಲಾ ₹1.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ತಲಾ ₹1 ಕೋಟಿ ಹಾಗೂ ನಗರಸಭೆ ಅನುದಾನದಡಿ ₹25 ಲಕ್ಷ ಸೇರಿದೆ.
ಬೆಟಗೇರಿ ವಾರ್ಡ್ ನಂ. 2, 4 ಹಾಗೂ 8ರಲ್ಲಿ ಸಿಸಿ ರಸ್ತೆ, ಚರಂಡಿ ಹಾಗೂ ವಿವಿಧ ಸಿವಿಲ್ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ವಾರ್ಡ್ ನಂ. 9, 16, 17 ಹಾಗೂ 18ರಲ್ಲಿ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು.
ಅವಳಿ ನಗರದ ಮೂಲಸೌಕರ್ಯವನ್ನು ಹಂತ ಹಂತವಾಗಿ ಸುಧಾರಿಸುವ ಮೂಲಕ ಜನರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಶಾಸಕ ಎಚ್.ಕೆ. ಪಾಟೀಲ ತಿಳಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಅಶೋಕ ಮಂದಾಲಿ, ಎಸ್.ಎನ್. ಬಳ್ಳಾರಿ, ಸುರೇಶ ಕಟ್ಟಿಮನಿ, ಶಕುಂತಲಾ ಅಕ್ಕಿ, ಚಂದ್ರು ಕರಿಸೋಮನಗೌಡ್ರ, ನಗರಸಭೆ ಆಯುಕ್ತ ರಾಜಾರಾಮ ಪವಾರ್, ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಹಾಗೂ ವಿವಿಧ ವಾರ್ಡ್‌ಗಳ ಸದಸ್ಯರು ಉಪಸ್ಥಿತರಿದ್ದರು.



