ವಿಜಯಪುರ:- ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊನೆಗೂ ಹೈಕಮಾಂಡ್ ಕ್ರಮ ಕೈಗೊಂಡಿದೆ.
ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇಂದು ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ.
ಇನ್ನೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ನಗರದಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಮಾಜಿ ಪಾಲಿಕೆ ಸದಸ್ಯ ಉಮೇಶ ವಂದಾಲ ನೇತೃತ್ವದಲ್ಲಿ ಸಂಭ್ರಮೋತ್ಸವ ಮಾಡಿದ್ದಾರೆ. ನಗರದ ಶಾಹುನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮ ಆಚರಿಸಿದರು.