ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಆದರೆ ಅಕ್ಟೋಬರ್ 25ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ.
ಮತ್ತೊಂದೆಡೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದೆ.
ಈ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ ಶೇ.30ರಿಂದ 40ರಷ್ಟು ಕಡಿಮೆ ಮಳೆಯಾಗಿದೆ ಎಂದು ಸಿ.ಎಸ್. ಪಾಟೀಲ್ ಹೇಳಿದ್ದಾರೆ.
ಇನ್ನು ಚಳಿಗಾಲದ ಬಗ್ಗೆಯೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಡಿಸೆಂಬರ್, ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿಗೆ ಹೋಲಿಸಿದರೆ ಉತ್ತರ ಒಳನಾಡಿನಲ್ಲಿ ಚಳಿಯ ತೀವ್ರತೆ ಹೆಚ್ಚಿರಬಹುದು. ಕರಾವಳಿ ಜಿಲ್ಲೆಗಳಲ್ಲಿ ಅಷ್ಟೊಂದು ಚಳಿ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಎಲ್ ನಿನೋ ಹಿನ್ನೆಲೆಯಲ್ಲಿ ಚಳಿಗಾಲದ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದ್ದು, ತಾಪಮಾನ ವಾಡಿಕೆಗಿಂತ ಸ್ವಲ್ಪ ಹೆಚ್ಚಾಗಿರಬಹುದು ಎಂಬ ಮುನ್ಸೂಚನೆಯನ್ನೂ ನೀಡಿದ್ದಾರೆ.







