ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಯೋಗವು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗವಾಗಿದ್ದು, ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮತೋಲನಗೊಳಿಸುವ ಸಮಗ್ರ ಜೀವನ ಪದ್ಧತಿಯಾಗಿದೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಸಮೀಪದ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯೋಗದ ಮಹತ್ವವನ್ನು ಧರ್ಮಗ್ರಂಥಗಳು ಪ್ರಾಚೀನ ಕಾಲದಿಂದಲೇ ಸಾರಿದ್ದು, ಇಂದು ಅದು ವಿಶ್ವಾದ್ಯಂತ ಮಾನ್ಯತೆ ಪಡೆದಿದೆ. ಯೋಗವನ್ನು ಜೀವನದ ಭಾಗವನ್ನಾಗಿ ಮಾಡಿಕೊಂಡಾಗ ಅದರ ನಿಜವಾದ ಮಹತ್ವ ಅರಿವಾಗುತ್ತದೆ ಎಂದು ಹೇಳಿದರು.
ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಜೂನ್ 21 ವರ್ಷದಲ್ಲಿ ಅತಿ ಹೆಚ್ಚು ಹಗಲು ಇರುವ ದಿನವಾಗಿದ್ದು, ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ಈ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ.
ಯೋಗವು ಭಾರತವು ವಿಶ್ವಕ್ಕೆ ನೀಡಿದ ಶ್ರೇಷ್ಠ ಕೊಡುಗೆಗಳಲ್ಲಿ ಒಂದಾಗಿದ್ದು, ಅದನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ನಸುಕಿನ ಜಾವದಿಂದಲೇ ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ ಯೋಗಗುರುಗಳ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನ ಮತ್ತು ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿದರು.
ಶಾಸಕ ಡಾ. ಚಂದ್ರು ಲಮಾಣಿ ಕೂಡ ಕಾರ್ಯಕರ್ತರೊಂದಿಗೆ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ಅನಿಲ ಮುಳಗುಂದ, ಸೋಮೇಶ ಉಪನಾಳ, ವಿಜಯ ಹತ್ತಿಕಾಳ, ಅಶೋಕ ಶಿರಹಟ್ಟಿ, ಮಹಾದೇವಪ್ಪ ಅಣ್ಣಿಗೇರಿ, ಡಿ.ವೈ. ಹುನಗುಂದ, ಕೃಷ್ಣ ಬಿದರಳ್ಳಿ, ನಿಂಗಪ್ಪ ಬನ್ನಿ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ಈರಣ್ಣ ಅಕ್ಕೂರ, ಬಾಬಣ್ಣ ವೇರ್ಣೆಕರ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.



