ವಿಜಯಸಾಕ್ಷಿ ಸುದ್ದಿ, ರೋಣ: ಹಿರೇಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ.ಕಂದಕೂರ ಮಾತನಾಡಿ, ಯೋಗವು ಭಾರತದ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದೆ. ಇದನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಇದು ಮನಸ್ಸು, ದೇಹ ಮತ್ತು ಆತ್ಮದ ಸಾಮರಸ್ಯವನ್ನು ಸಾಧಿಸುವ ಒಂದು ಜೀವನ ಕಲೆ. ಯೋಗವು ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ, ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ತರುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದರು.
ತಾಲೂಕಾ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಎ. ಫನಿಬಂಧ ಮಾತನಾಡಿ, ಯೋಗವನ್ನು ಪ್ರತಿಯೊಬ್ಬರೂ ಮಾಡಬೇಕು. ಇದರಿಂದ ಮಾನಸಿಕ ನೆಮ್ಮದಿ ದೊರಕುತ್ತದೆ. ವಿದ್ಯಾರ್ಥಿಗಳಿಗೆ ಯೋಗದ ಮೂಲಕ ಆರೋಗ್ಯಕರ ಜೀವನಶೈಲಿಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಆರ್.ಎನ್. ನಾಯ್ಕರ್, ಕ್ಷೇತ್ರ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶಿವಾನಂದ ಪರಸನ್ನವರ, ಬಿ.ಎಲ್. ಕ್ಯಾತನಗೌಡರ, ಮುಖ್ಯೋಪಾಧ್ಯಾಯರಾದ ಎಂ.ಜಿ. ತೊನಶ್ಯಾಳ, ಜಿ.ಬಿ. ತುಮ್ಮನಿಕಟ್ಟಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬಿ.ಎಸ್. ದಳವಾಯಿ ಸೇರಿದಂತೆ ಸಿಬ್ಬಂದಿಗಳು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.