ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬೇಸಿಗೆ ರಜೆ ಬಳಿಕ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಹಾಗೂ ಚಂದ್ರಶೇಖರ್ ಇಂಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಮತ್ತು ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ವಿಭಾಗೀಯ ಪೀಠ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಈವರೆಗೆ ಸಿಬಿಐ ಪರದಿಂದ ಆಕ್ಷೇಪಣೆ ಸಲ್ಲಿಕೆಯಾಗಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಜೊತೆಗೆ, ಶಿಕ್ಷೆಯಿಂದ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಕಳೆದುಕೊಂಡಿರುವ ಹಿನ್ನೆಲೆ ಮಧ್ಯಂತರ ಚುನಾವಣೆ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡುವಂತೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಬಿಐ ಪರ ವಕೀಲರು, ಅರ್ಜಿಗೆ ಸಂಬಂಧಿಸಿದ ಆಕ್ಷೇಪಣೆ ಸಿದ್ಧವಾಗಿದ್ದು, ಅದನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಬೇಸಿಗೆ ರಜೆ ಮುಗಿದ ಬಳಿಕ ಮುಂದುವರಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ
2016ರಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸುದೀರ್ಘ ವಿಚಾರಣೆ ನಡೆಸಿ, 2026ರ ಏಪ್ರಿಲ್ 15ರಂದು 17 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿತ್ತು. ಬಳಿಕ ಏಪ್ರಿಲ್ 17ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ.
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆಯಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಶಿಕ್ಷೆ ಘೋಷಿತ ದಿನಾಂಕದಿಂದಲೇ ಅನರ್ಹತೆ ಜಾರಿಯಾಗಿದ್ದು, ಶಿಕ್ಷಾ ಅವಧಿ ಪೂರ್ಣಗೊಂಡ ನಂತರವೂ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ.
ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 8 ಪ್ರಕಾರ, ಯಾವುದೇ ಜನಪ್ರತಿನಿಧಿಗೆ ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆ ವಿಧಿಸಿದರೆ ಅವರು ಸ್ವಯಂಚಾಲಿತವಾಗಿ ಅನರ್ಹರಾಗುತ್ತಾರೆ. ಆದರೆ, ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಿದಲ್ಲಿ ಅನರ್ಹತೆ ಆದೇಶವೂ ಅಮಾನತುಗೊಳ್ಳುವ ಸಾಧ್ಯತೆ ಇದೆ.



