ನವದೆಹಲಿ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇತ್ತೀಚೆಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಬಳಿಕ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರ ಪೀಠವು ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಅವರ ಜಾಮೀನು ರದ್ದುಪಡಿಸಬೇಕೆಂದು ಕೇಂದ್ರ ತನಿಖಾ ದಳ (ಸಿಬಿಐ) ಮನವಿ ಮಾಡಿತ್ತು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶರಣಾಗಿದ್ದ ವಿನಯ್ ಕುಲಕರ್ಣಿ ಅವರಿಗೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೊದಲು ಜಾಮೀನು ರದ್ದುಗೊಂಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಧಾರವಾಡದ ಜಿಮ್‌ನಲ್ಲಿ 2016ರ ಜೂನ್ 15ರಂದು ಯೋಗೀಶ್ ಗೌಡರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಬಗ್ಗೆ ಯೋಗೀಶ್ ಗೌಡ ಅವರ ಸಹೋದರ ಹಾಗೂ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗಿನ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.
ಆ ಸಮಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆರಂಭದಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸದೇ ಎಸ್‌ಐಟಿಗೆ ಒಪ್ಪಿಸಲಾಗಿತ್ತು. ಬಳಿಕ ಸಿಬಿಐ ತನಿಖೆ ನಡೆಸಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.



