ಬೀದರ್: ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದು ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಇಸ್ಲಾಂಪುರ ಗ್ರಾಮದ ಸಚೀನ್ (24) ಎಂದು ಗುರುತಿಸಲಾಗಿದೆ. ಬಿಸಿಎ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದ ಸಚೀನ್ ಅವರು ಕಳೆದ ಎರಡು ವರ್ಷಗಳಿಂದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು. ನಾಲ್ಕು ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದ ಅವರು, ಸತತ ಎರಡು ವರ್ಷಗಳಿಂದ ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಒಂದೆಡೆ ಸಾಲದ ಹೊರೆ, ಮತ್ತೊಂದೆಡೆ ಮಳೆ ಕೈಕೊಟ್ಟ ಪರಿಣಾಮ ಬೆಳೆ ನಷ್ಟವಾಗಿದ್ದರಿಂದ ಸಚೀನ್ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಸೋಮವಾರ ಸಂಜೆ ಸುಮಾರು 5 ಗಂಟೆಯ ವೇಳೆಗೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವರ್ಷವೂ ಬೆಳೆ ನಷ್ಟವಾಗಿದ್ದರೂ ಸರ್ಕಾರದಿಂದ ಪರಿಹಾರ ದೊರೆತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿಯನ್ನು ಪರಿಗಣಿಸಿ ರೈತರಿಗೆ ಸೂಕ್ತ ಬರ ಪರಿಹಾರ ನೀಡಬೇಕು ಎಂದು ಸ್ಥಳೀಯ ರೈತರು ಆಗ್ರಹಿಸಿದ್ದಾರೆ. ಮೃತ ಸಚೀನ್ ಅವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಹಾಗೂ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಘಟನೆ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.



