ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ ಗ್ರಾಮದ ಯುವಕನನ್ನು ಕತ್ತು ಕೊಯ್ದು ಕ್ರೂರವಾಗಿ ಹತ್ಯೆ ಮಾಡಿರುವ ದುರ್ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಮಹ್ಮದ್ ಫಾರೂಕ್ ಶೇಖ್ ಸನದಿ (25) ಎಂದು ಗುರುತಿಸಲಾಗಿದೆ. ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹರ್ಲಾಪೂರ ಗ್ರಾಮದ ನಿವಾಸಿ ಆಗಿರುವ ಪಾರೂಕ್ ಸದ್ಯ ಶಿಗ್ಲಿ ಗ್ರಾಮದಲ್ಲಿ ವಾಸವಾಗಿದ್ದ. ಇದೀಗ ಲಕ್ಷ್ಮೇಶ್ವರ ಸಮೀಪದ ಜಮೀನೊಂದರಲ್ಲಿ ಆತನ ಶವ ಪತ್ತೆಯಾಗಿದೆ.
ಅಪರಿಚಿತರು ಕತ್ತು ಕೊಯ್ದು ಹತ್ಯೆ ನಡೆಸಿ, ಬಳಿಕ ಶವವನ್ನು ಹೊಲದಲ್ಲಿ ಬಿಸಾಡಿರುವ ಸಾಧ್ಯತೆ ವ್ಯಕ್ತವಾಗಿದೆ. ಘಟನೆ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಹಲವು ಸುಳಿವುಗಳನ್ನು ಸಂಗ್ರಹಿಸಿರುವುದಾಗಿ ತಿಳಿದು ಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಹತ್ಯೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.
ಘಟನೆ ಶಿಗ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕ ಮೂಡಿಸಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸುದ್ದಿ ತಿಳಿದ ಡಿವೈಎಸ್ಪಿ ಮುರ್ತಾಜಾ ಖಾದ್ರಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



