ಬೆಂಗಳೂರು: ಚಿಕ್ಕಮ್ಮನ ಮಗಳ ಮದುವೆ ಕಾರ್ಯಕ್ರಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ಯುವಕನೊಬ್ಬ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಬಳಿ ನಡೆದಿದೆ.
ಮೃತ ಯುವಕನನ್ನು 25 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಸುಮಾರು 12 ಗಂಟೆ ವೇಳೆಗೆ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಕೃಷ್ಣ ಇತ್ತೀಚೆಗಷ್ಟೇ ಕಾವೇರಿ ಎಂಬ ಯುವತಿಯನ್ನು ವಿವಾಹವಾಗಿದ್ದರು. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ವಾಸವಾಗಿದ್ದ ಅವರು, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಸೋಮವಾರ ಬೆಳಿಗ್ಗೆ ನಡೆಯಬೇಕಿದ್ದ ಚಿಕ್ಕಮ್ಮನ ಮಗಳ ಮದುವೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ತ್ಯಾಮಗೊಂಡ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನೆಲಮಂಗಲದ ಶವಾಗಾರಕ್ಕೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.










