ಬಾಗಲಕೋಟೆ: ಮೂವರು ಯುವಕರು ಸೇರಿ ಹಲ್ಲೆ ನಡೆಸಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾವಳಗಿ ಗ್ರಾಮದಲ್ಲಿ ಕಳೆದ ಮಂಗಳವಾರ (ಮಾರ್ಚ್ 11) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಮೃತ ಯುವಕನನ್ನು ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ. ಹಲ್ಲೆಯ ನಂತರ ಸುದೀಪ್‌ಗೆ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಶಾಲೆಯ ವಾರ್ಷಿಕ ಕಾರ್ಯಕ್ರಮದ ವೇಳೆ ಸುದೀಪ್ ಶಾಲೆಯ ಮೇಲ್ಛಾವಣಿಯ ಮೇಲೆ ಕುಳಿತು ಕಲ್ಲೆಸೆದಿದ್ದಾನೆ ಎಂದು ಆರೋಪಿಸಿ ಕೆಲ ಯುವಕರು ಅವನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಂಭೀರವಾಗಿ ಗಾಯಗೊಂಡ ಸುದೀಪ್ ಅನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ.
ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆಗೈದ ಆರೋಪದ ಮೇಲೆ ರಾಜು ಮಾಳೆ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳೆ ವಿರುದ್ಧ ಎಫ್‌ಐಆರ್ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂಬ ಆರೋಪದಡಿ ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



