ಧಾರವಾಡ: ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ ನನ್ನು ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ತಿಳಿದ ತಕ್ಷಣ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕೃತ್ಯವನ್ನು ಆರು ಮಂದಿ ಸೇರಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮೊಹಮ್ಮದ್ ಶಾ, ಸದ್ದಾಂ, ಗೌಸ್ ಮತ್ತು ಪರ್ವೇಜ್ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿರುವ ಆರೋಪಿಗಳೆಂದು ತಿಳಿದುಬಂದಿದೆ.
ಕೊಲೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೈದ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ಮುಂದುವರಿದಿದೆ.
ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಉಪನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.



