ವಿಜಯಸಾಕ್ಷಿ ಸುದ್ದಿ, ಗದಗ: ಟ್ಯಾಕ್ಸಿ ಪಡೆದ ಯುವಕರು ಪ್ರಾಮಾಣಿಕವಾಗಿ ದುಡಿದು ಉತ್ತಮ ಜೀವನ ನಡೆಸಿ ಸಮಾಜಕ್ಕೆ ಮಾದರಿ ಆಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕರ್ನಾಟಕ ಸಂಭ್ರಮ 50ರ ಅಂಗವಾಗಿ ಪ್ರವಾಸಿ ಟ್ಯಾಕ್ಸಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗದಗ ಜಿಲ್ಲೆಯ ಯುವಕರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಾರೆ. ಹಾಗಾಗಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಂಚಾರಕ್ಕಾಗಿ ಬಳಸುವ ಟ್ಯಾಕ್ಸಿಗಳಲ್ಲಿ ಇಂದು ಟ್ಯಾಕ್ಸಿ ಪಡೆದ ಜಿಲ್ಲೆಯ ಯುವಕರನ್ನು ಪರಿಗಣಿಸಿ ಬಳಸಿಕೊಳ್ಳಬೇಕು ಎಂದು ಮಾನ್ಯನೇಜಿಂಗ್ ಡೈರೆಕ್ಟರ್ ರ್ರಾಜೇಂದ್ರ ಅವರಿಗೆ ಸಚಿವರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಯುವಕರು ಸ್ವಾವಲಂಬಿಗಳಾಗಬೇಕು ಎನ್ನುವ ಉದ್ದೇಶದಿಂದ ದಾಖಲೆ ರೀತಿಯಲ್ಲಿ ಕಾರುಗಳನ್ನು ವಿತರಣೆ ಮಾಡಿರುವುದು ಸಂತೋಷ ತಂದಿದೆ. ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲರು ಅಭಿನಂದನಾರ್ಹರು ಎಂದರು.
ಟ್ಯಾಕ್ಸಿಗಳನ್ನು ಪಡೆದ ಯುವಕರು ಗದಗ ಜಿಲ್ಲೆಯನ್ನು ಪ್ರವಾಸೋದ್ಯಮ ತಾಣವನ್ನಾಗಿಸಿ ಅಭಿವೃದ್ಧಿಪಡಿಸುವ ಗುರಿ ಹೊಂದಬೇಕು. ಟ್ಯಾಕ್ಸಿ ಪಡೆದ ಯುವಕರು ಗದಗ ಜಿಲ್ಲೆಗೆ ಸೀಮಿತವಾಗದೆ ರಾಜ್ಯದಲ್ಲಿರುವ ವಿವಿಧ ದೊಡ್ಡ ದೇವಾಲಯ, ಸ್ಮಾರಕ, ನಿಸರ್ಗಧಾಮ ಅಲ್ಲಿನ ವಸತಿ, ಊಟ ವ್ಯವಸ್ಥೆ, ಐತಿಹಾಸಿಕ ಹಿನ್ನೆಲೆಗಳ ಬಗ್ಗೆ ಮಾಹಿತಿ ಹೊಂದಿರಬೇಕು ಎಂದರು.
ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕರಾದ ಜಿ.ಎಸ್. ಪಾಟೀಲ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಕೆಡಿಪಿ ಸದಸ್ಯ ಡಿ.ಆರ್. ಪಾಟೀಲ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಐಯ್ಯಸ್ವಾಮಿ, ಸಿದ್ದು ಪಾಟೀಲ, ಪ್ರಭು ಬುರಬುರೆ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ರಾಜೇಂದ್ರ, ಕೆನರಾ ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.










