ವಿಜಯಸಾಕ್ಷಿ ಸುದ್ದಿ, ಗದಗ: ಎರಡು ವರ್ಷದ ಹಿಂದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಯಾವುದೇ ಸಾಧನೆಯನ್ನು ಮಾಡದೇ ಮೇ. 20ರಂದು ಸಾಧನಾ ಸಮಾವೇಶ ಹಮ್ಮಿಕೊಂಡಿದ್ದು, ಇದು ಶೂನ್ಯ ಸಾಧನೆಯ ಸಮಾವೇಶವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ, ಬಹಳಷ್ಟು ಭರವಸೆಗಳೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿಲ್ಲ. 5 ಗ್ಯಾರಂಟಿಗಳನ್ನು ನೀಡಿ ಇದನ್ನೇ ಪ್ರಚಾರ ಮಾಡುತ್ತಿದ್ದಾರೆ. ಕೇವಲ 5 ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿಯಾಗದು. 2 ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದ ಯಾವುದೇ ಇಲಾಖೆಯಲ್ಲಿ ಅಭಿವೃದ್ಧಿಗಳೇ ಆಗಿಲ್ಲ. ಎಸ್.ಸಿ,ಎಸ್.ಟಿಗಾಗಿ ಮೀಸಲಿಟ್ಟಿದ್ದ 38 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಸಿಕೊಂಡಿದ್ದು ಆ ಸಮಾಜಕ್ಕೆ ಸರ್ಕಾರ ದೊಡ್ಡ ಆಘಾತವನ್ನೇ ನೀಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ. ಪ್ರತಿಯೊಂದು ವಸ್ತುವಿನ ಬೆಲೆಯನ್ನು ಏರಿಸಿದ್ದು ಈ ಸರ್ಕಾರದ ಸಾಧನೆಯಾಗಿದೆ ಎಂದಿದ್ದಾರೆ.
ಅಲ್ಪಸಂಖ್ಯಾತರಿಗೆ ಮಾತ್ರ ಸಾಕಷ್ಟು ಯೋಜನೆಗಳನ್ನು ತಂದು ಬಹುಸಂಖ್ಯಾತ ಹಿಂದೂಗಳಿಗೆ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕರಾದ ಬಸವರಾಜ ರಾಯರೆಡ್ಡಿರವರು ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಇಡೀ ದೇಶದಲ್ಲಿಯೇ ನಂಬರ್ 1 ಸ್ಥಾನದಲ್ಲಿ ಇದೆ ಎಂದು ಹೇಳಿರುವುದು ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಸಾಕ್ಷಿಯಾಗಿದೆ ಎಂದು ತೋಟಪ್ಪ(ರಾಜು) ಕುರುಡಗಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದಶಿಗಳಾದ ಲಿಂಗರಾಜ ಪಾಟೀಲ ಮಲ್ಲಾಪೂರ, ಪಕ್ಕಿರೇಶ ರಟ್ಟಿಹಳ್ಳಿ, ಆರ್.ಕೆ. ಚವ್ಹಾಣ, ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ, ಶಹರ ಅಧ್ಯಕ್ಷ ಸುರೇಶ ಮರಳಪ್ಪನವರ, ಗ್ರಾಮೀಣ ಅಧ್ಯಕ್ಷ ಬೂದಪ್ಪ ಹಳ್ಳಿ, ತಾ.ಪಂ ಮಾಜಿ ಅಧ್ಯಕ್ಷ ಬಿ.ಎಸ್. ಚಿಂಚಲಿ ರಾಜ್ಯ ಸರ್ಕಾರದ 2 ವರ್ಷದ ಆಡಳಿತವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.