• ಮೃತ ಮಹಿಳೆಯ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ
ವಿಜಯಸಾಕ್ಷಿ ಸುದ್ದಿ, ಗದಗ:
‘ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ಸೋಮವಾರ ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಉದ್ವೇಗಕ್ಕೆ ಒಳಗಾಗಿ ಇಬ್ಬರು ಮಹಿಳೆಯರು ವಿಷ ಸೇವಿಸಿದ್ದು, ಅವರಲ್ಲಿ ಒಬ್ಬರು ಮೃತಪಟ್ಟಿರುವುದು ಅತ್ಯಂತ ದುರ್ದೈವದ ಘಟನೆ’ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ವಿಷಾದ ವ್ಯಕ್ತಪಡಿಸಿದರು.
ಈ ಘಟನೆಯ ಕುರಿತು ಸಂಬಂಧಿಸಿದ ಗದಗ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತನಾಡಿರುವ ಅವರು, ‘ಈ ರೀತಿಯ ಅವಘಡಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಒತ್ತುವರಿ ತೆರವು ಕಾರ್ಯಾಚರಣೆಯಂತಹ ಪ್ರಸಂಗಗಳಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕು ಎಂದು ಸೂಚಿಸಿದ ಅವರು, ಈ ಘಟನೆಯಲ್ಲಿ ವಿಷ ಸೇವಿಸಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸರೋಜಾ ಪಾಟೀಲ ಅವರಿಗೆ ಅಗತ್ಯವಿರುವ ಹೆಚ್ಚಿನ ಚಿಕಿತ್ಸೆ ನೀಡಲು ಸೂಕ್ತ ಕ್ರಮ ಕೈಗೊಳ್ಳಲು’ ನಿರ್ದೇಶಿಸಿದರು.
‘ಈಗಾಗಲೇ ಮೃತ ಮಹಿಳೆ ನಿರ್ಮಲಾ ಪಾಟೀಲ ಅವರ ಕುಟುಂಬ ಸದಸ್ಯರನ್ನು ಜಿಲ್ಲಾಧಿಕಾರಿಗಳು ಭೇಟಿಯಾಗಿದ್ದಾರೆ. ತಾವು ಕೂಡಾ ಸದ್ಯದಲ್ಲೇ ಅಲ್ಲಿಗೆ ತೆರಳಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳುವುದಾಗಿ ಸಷ್ಟಪಡಿಸಿದ ಸಿ.ಸಿ.ಪಾಟೀಲರು, ಅರಣ್ಯ ಒತ್ತುವರಿ ಕಾರ್ಯಾಚರಣೆ ಮಾಡುವಾಗ ಯಾರಿಗೂ ಅನ್ಯಾಯವಾಗದಂತೆ ನಿಯಮಾನುಸಾರವಾಗಿ ಕ್ರಮ ಕೈಗೊಳ್ಳಬೇಕು’ ಎಂದು ಸಚಿವ ಸಿ.ಸಿ.ಪಾಟೀಲ್ ಅರಣ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು.
5 ಲಕ್ಷ ರೂ. ಪರಿಹಾರ: ಘಟನೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಚರ್ಚಿಸಿದ್ದು, ಮಾನವೀಯ ದೃಷ್ಟಿಯಿಂದ ಮೃತ ಮಹಿಳೆಯ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಘೋಷಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆ ಪ್ರಕಾರ ಅವರ ಕುಟುಂಬದವರಿಗೆ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಸಿ.ಪಾಟೀಲ ತಿಳಿಸಿದ್ದಾರೆ.