ವಿಜಯಸಾಕ್ಷಿ ಸುದ್ದಿ, ಗದಗ
ಕೇಂದ್ರ ಸರಕಾರದ ಕೃಷಿ ವಿರೋಧಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಗದಗ ಜಿಲ್ಲೆಯಲ್ಲಿ ವಿವಿಧ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಬೆಳಿಗ್ಗೆಯಿಂದ ಅವಳಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಬಂದ್ ನ ಬಿಸಿ ಇರಲಿಲ್ಲ.
ಮುಂಜಾನೆ 11 ಗಂಟೆಯ ನಂತರ ಗದಗನ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಸೇರಿದ ನೂರಾರು ರೈತರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ತೆರೆದಿದ್ದ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿಸಿದರು.
ನಂತರ ಸರ್ಕಲ್ ನಲ್ಲಿ ಅಡುಗೆ ಮಾಡಲು ಮುಂದಾದರು. ಈ ಸಂದರ್ಭದಲ್ಲಿ ಸ್ಥಳದಲ್ಲಿಯೇ ಇದ್ದ ಪೊಲೀಸರು, ಬೆಂಕಿ ಹಚ್ಚಲು ಅವಕಾಶ ನೀಡಲ್ಲ ಎಂದಾಗ ಪೊಲೀಸರು, ಪ್ರತಿಭಟನಾಕಾರರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ನಂತರ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಮುಳಗುಂದ ನಾಕಾದಲ್ಲಿ ಕೆಲಹೊತ್ತು ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.