ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಜಿಂದಾಲ್ ಸಂಸ್ಥೆಗೆ ರಾಜ್ಯ ಸರ್ಕಾರ ಸುಮಾರು 3,667 ಎಕರೆ ಭೂಮಿ ಹಸ್ತಾಂತರ ಮಾಡಿರುವ ಕುರಿತು ವಕೀಲ ದೊರೆರಾಜು ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಲೀಗಲ್ ನೊಟೀಸ್ ಜಾರಿ ಮಾಡಿದ್ದಾರೆ.
ಸರ್ಕಾರಿ ಜಮೀನನ್ನು ಖಾಸಗಿ ಸಂಸ್ಥೆಗೆ ನೀಡುವ ವಿಚಾರದ ಕುರಿತು ತರಾತುರಿಯಾಗಿ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡು ಭೂಮಿ ಹಸ್ತಾಂತರ ಮಾಡಿರುವುದು ಕಾನೂನು ಬಾಹಿರವಾಗಿದೆ. ಜಿಂದಾಲ್ ಸಂಸ್ಥೆ ಕಾನೂನುಬಾಹಿರ ಚಟುವಟಿಕೆ ನಡೆಸಿದೆ ಎಂದು ಲೋಕಾಯುಕ್ತ, ನೀಡಿರುವ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಜಿಂದಾಲ್ ಸಂಸ್ಥೆಯು ಈ ಹಿಂದೆ ಸೌತ್ ವೆಸ್ಟ್ ಕಂಪನಿ ಮೂಲಕ ನಡೆಸಿದ ಗಣಿಗಾರಿಕೆಯಿಂದ ರಾಜ್ಯ ಸರ್ಕಾರಕ್ಕೆ ರೂ. 1078 ಕೋಟಿ ನಷ್ಟವಾಗಿದ್ದರ ಬಗ್ಗೆ ಲೋಕಾಯುಕ್ತ ವರದಿ ನೀಡಿದೆ ಎಂದು ಉಲ್ಲೇಖಿಸಿದ್ದಾರೆ.
ಈ ಕುರಿತು ಹೈಕೋರ್ಟ್, ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಜಿಂದಾಲ್ ಸಂಸ್ಥೆಗೆ ಸರ್ಕಾರಿ ಭೂಮಿಯನ್ನು ನೀಡುವುದರಿಂದ ಪರಿಸರಕ್ಕೆ ಹಾನಿಯಾಗಲಿದೆ. ಹೆಚ್ಚು ಖನಿಜಾಂಶವುಳ್ಳ ಜಾಗದಲ್ಲಿ ಪ್ರತಿ ಎಕರೆಗೆ ಕೇವಲ ರೂ. 1,22,195 ನಿಗದಿಪಡಿಸಿದ್ದು, ಸರ್ಕಾರಕ್ಕೆ ದೊಡ್ಡ ನಷ್ಟವಾಗಿದೆ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.
ಸರ್ಕಾರದ ಈ ನಿರ್ಧಾರದ ವಿರೋಧಿಸಿ ಶಾಸಕ ಉದಯ್ ಗರುಡಾಚಾರ್, ಪೂರ್ಣಿಮ ಕೃಷ್ಣಪ್ಪ, ಅರವಿಂದ ಬೆಲ್ಲದ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಇದಕ್ಕ ಸಿಎಂ ಅವರು ಗರಂ ಆಗಿದ್ದು, ಈ ಕುರಿತು ಸ್ಪಷ್ಟನೆ ನೀಡುವಂತೆ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಅವರಿಗೆ ಸೂಚನೆ ನೀಡಿದ್ದಾರೆ. ಇದಕ್ಕೆ ಗರುಡಾಚಾರ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ.