ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಮಹಾಮಾರಿ ಉಲ್ಭಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು, ಸ್ಥಳಾಂತರ ಮಾಡಲು ಹಾಗೂ ಆಸ್ಪತ್ರೆಗಳಿಂದ ಬಿಡುಗಡೆ ಮಾಡುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ರೋಗ ನಿರ್ವಹಣೆಗೆ ಆಸ್ಪತ್ರೆಗಳ ಹಾಸಿಗೆಗಳು ಮುಖ್ಯವಾಗಿದೆ. ಹೀಗಾಗಿ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವವರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ತೊಂದರೆ ಎದುರಿಸುವುದನ್ನು ತಪ್ಪಿಸಲು ಯಾರಿಗೆ, ಎಲ್ಲಿ ಚಿಕಿತ್ಸೆ ನೀಡಬೇಕು ಎನ್ನುವ ಕುರಿತು ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೊರೊನಾ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವವರ ಆರೋಗ್ಯ ಸ್ಥಿತಿ ಉತ್ತಮಗೊಳ್ಳುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಿ ತಾತ್ಕಾಲಿಕ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಬೇಕು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಯಾವುದೇ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಕ್ಕೂ ಮುನ್ನ ರಾಜ್ಯ ಸರ್ಕಾರ ಹೊರಡಿಸಿರುವ ಡಿಸ್ಚಾರ್ಜ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಖಾಸಗಿ ಆಸ್ಪತ್ರೆಗೆ ದಾಖಲಾದವರಿಗೂ ಇದೇ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.