ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ವ್ಯಕ್ತಿಯು ತನ್ನ ಸಾಮರ್ಥ್ಯಗಳನ್ನು ಅರಿತುಕೊಂಡು ಜೀವನದ ಸಾಮಾನ್ಯ ಒತ್ತಡಗಳನ್ನು ನಿಭಾಯಿಸಬೇಕು. ಪ್ರತಿಯೊಬ್ಬರೂ ಮಾನಸಿಕ ಸಮತೋಲನ ಕಾಯ್ದುಕೊಳ್ಳುವ ಮೂಲಕ ಆರೋಗ್ಯವಂತ ಜೀವನ ನಡೆಸಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ವಿ.ಪಾಟೀಲ ಹೇಳಿದರು.
ನಗರದ ಜಿಲ್ಲಾ ಸತ್ರ ನ್ಯಾಯಾಲಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಗದಗ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೀವನ ಕೌಶಲ್ಯಗಳನ್ನು ಹೊಂದುವುದರ ಜೊತೆಗೆ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಬೇಕು. ಮಾನಸಿಕ ಅಸ್ವಸ್ಥತೆಯಿಂದ ಬಳಲುವವವರು ಸಾಮಾಜಿಕ, ಆರ್ಥಿಕ ಹಾಗೂ ಔಧ್ಯೋಗಿಕವಾಗಿ ಹಿನ್ನಡೆ ಅನುಭವಿಸುತ್ತಾರೆ. ಹೀಗಾಗಿ ಮಾನಸಿಕ ಸಮಸ್ಯೆ ಇರುವ ವ್ಯಕ್ತಿಗಳು ಸಕಾಲಕ್ಕೆ ಚಿಕಿತ್ಸೆ ಪಡೆದರೆ ಖಾಯಿಲೆ ಗುಣಪಡಿಸಬಹುದಾಗಿದ್ದು, ಮೊದಲಿನಂತೆ ಸಹಜ ಜೀವನ ನಡೆಸಬಹುದು ಎಂದರು.
ಸರ್ಕಾರ ಮಾನಸಿಕವಾಗಿ ಅಸ್ವಸ್ಥಗೊಂಡಿರುವವರ ಬಗ್ಗೆ ನಿಗಾವಹಿಸಿದ್ದು, ಚಿಕಿತ್ಸೆಗಾಗಿ ಸಾಕಷ್ಟು ಹಣ ವ್ಯಯಿಸುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೇ, ಮಾನಸಿಕ ಅಸ್ವಸ್ಥರನ್ನು ಕಡೆಗಣಿಸದೇ ಅವರನ್ನೂ ನಮ್ಮವರೆಂದು ಭಾವಿಸಬೇಕು ಎಂದರು.
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ವಿ.ನರಸಿಂಹಸಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ, ಜೆಎಂಎಫ್‌ಸಿ ಮಹಾದೇವಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ ಬಸರೀಗಿಡದ, ಮಾನಸಿಕ ಆರೋಗ್ಯಾಧಿಕಾರಿ ಸೋಮಶೇಖರ ಬಿಜ್ಜಳ, ಮನೋರೋಗ ತಜ್ಞ ಡಾ.ತಾರಾಚಂದ ನಾಯ್ಕ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೈ.ಕೆ. ಭಜಂತ್ರಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್. ನೀಲಗುಂದ, ವಕೀಲ ಸಂಘದ ಪದಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚೌಹಾಣ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಪುಷ್ಪಾ ಪಾಟೀಲ ಕಾರ್ಯಕ್ರಮ ವಂದಿಸಿದರು.
ಸಾಮರ್ಥ್ಯ ಅರಿತು ಒತ್ತಡ ನಿಭಾಯಿಸಿ
Advertisement