ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ/ಗದಗ: ಅಭಿವೃದ್ಧಿಯ ಹೆಸರಿನಲ್ಲಿ ಕೋಟಿ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾದರೂ, ಜನರಿಗೆ ಅದರ ಪ್ರಯೋಜನ ಸಿಗದ ಮತ್ತೊಂದು ಪ್ರಕರಣ ಗದಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ–ಬಾಳೆಹೊಸೂರು ಸಂಪರ್ಕ ರಸ್ತೆ ಅಭಿವೃದ್ಧಿಗೆ ಸುಮಾರು ₹7 ಕೋಟಿ ಅನುದಾನ ಬಿಡುಗಡೆಯಾಗಿದ್ದರೂ, ಕಾಮಗಾರಿ ಆರಂಭಿಸಿ ಮೂರು ವರ್ಷಗಳಾದರೂ ಪೂರ್ಣಗೊಂಡಿಲ್ಲ. ಗುತ್ತಿಗೆದಾರರು ಜಲ್ಲಿಕಲ್ಲು ಹಾಕಿ ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ನಾಪತ್ತೆಯಾಗಿದ್ದು, ನಿತ್ಯ ಸಾವಿರಾರು ಜನರು, ರೈತರು ಹಾಗೂ ವಿದ್ಯಾರ್ಥಿಗಳು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ರಸ್ತೆ ಕೊಕ್ಕರಗುಂದಿ ಗ್ರಾಮವನ್ನು ಬಾಳೆಹೊಸೂರಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ. ಗ್ರಾಮಸ್ಥರು ಬ್ಯಾಂಕ್, ಸರ್ಕಾರಿ ಕಚೇರಿ, ಆಸ್ಪತ್ರೆ, ಶಾಲೆ-ಕಾಲೇಜು, ಕೃಷಿ ಮಾರುಕಟ್ಟೆ ಸೇರಿದಂತೆ ಬಹುತೇಕ ದೈನಂದಿನ ಅಗತ್ಯಗಳಿಗಾಗಿ ಬಾಳೆಹೊಸೂರನ್ನೇ ಅವಲಂಬಿಸಿದ್ದಾರೆ. ಆದರೆ ಅಪೂರ್ಣ ಕಾಮಗಾರಿಯಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಪ್ರತಿದಿನ ಸಂಕಷ್ಟ ಅನುಭವಿಸುತ್ತಿದ್ದಾರೆ.
ಗ್ರಾಮಸ್ಥರ ಮಾಹಿತಿ ಪ್ರಕಾರ, ಹಿಂದಿನ ಶಾಸಕ ರಾಮಣ್ಣ ಲಮಾಣಿ ಅವರ ಅವಧಿಯಲ್ಲಿ ಗ್ರಾಮಸ್ಥರ ನಿರಂತರ ಹೋರಾಟದ ಫಲವಾಗಿ ಪಂಚಾಯತ್ ರಾಜ್ ಇಲಾಖೆಯಿಂದ ಸುಮಾರು ₹7 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಗುತ್ತಿಗೆದಾರರು ಸುಮಾರು ಐದು ಕಿಲೋಮೀಟರ್ವರೆಗೆ ಜಲ್ಲಿಕಲ್ಲು ಹಾಕಿದ ಬಳಿಕ ಕಾಮಗಾರಿ ಸ್ಥಗಿತಗೊಳಿಸಿದ್ದು, ಕಳೆದ ಮೂರು ವರ್ಷಗಳಿಂದ ಯಾವುದೇ ಕೆಲಸ ನಡೆದಿಲ್ಲ. ರಸ್ತೆ ಬದಿಯಲ್ಲಿ ಗಿಡಗಂಟಿಗಳು ಬೆಳೆದಿದ್ದು, ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳಿನ ಕಾಟದಿಂದ ಜನರ ಸಂಚಾರ ದುಸ್ತರವಾಗಿದೆ.
ರಸ್ತೆಯ ದುಸ್ಥಿತಿಯಿಂದ ರೈತರು ಕೃಷಿ ಉತ್ಪನ್ನಗಳನ್ನು ಸಾಗಿಸಲು ಪರದಾಡುತ್ತಿದ್ದಾರೆ. ಆಂಬುಲೆನ್ಸ್ ಸೇರಿದಂತೆ ತುರ್ತು ಸೇವೆಗಳ ವಾಹನಗಳಿಗೂ ಈ ರಸ್ತೆಯಲ್ಲಿ ಸಂಚರಿಸುವುದು ಕಷ್ಟವಾಗಿದೆ. ಶಾಲಾ ಮಕ್ಕಳು ಹಾಗೂ ದ್ವಿಚಕ್ರ ವಾಹನ ಸವಾರರು ಅಪಘಾತದ ಭೀತಿಯಲ್ಲೇ ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಗ್ರಾಮಸ್ಥರು ಈಗಿನ ಶಾಸಕ ಡಾ. ಚಂದ್ರು ಲಮಾಣಿ ಅವರ ಗಮನಕ್ಕೂ ಸಮಸ್ಯೆ ತಂದಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರರ ಬೇಜವಾಬ್ದಾರಿಯಿಂದ ಅಭಿವೃದ್ಧಿ ಕಾಮಗಾರಿ ಅಪೂರ್ಣವಾಗಿದ್ದು, ಸಾರ್ವಜನಿಕ ಹಣ ವ್ಯರ್ಥವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಸ್ತೆ ಕಾಮಗಾರಿ ವಿಳಂಬದ ಕುರಿತು ಸಮಗ್ರ ತನಿಖೆ ನಡೆಸಿ, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಆರಂಭಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಕೋಟ್ಯಂತರ ರೂಪಾಯಿ ವೆಚ್ಚವಾಗಿದ್ದರೂ ರಸ್ತೆ ಜನರ ಬಳಕೆಗೆ ಬರದಿರುವುದು ಆಡಳಿತದ ಕಾರ್ಯವೈಖರಿಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಗ್ರಾಮಸ್ಥರ ಆಕ್ರೋಶಕ್ಕೆ ಜಿಲ್ಲಾಡಳಿತ ಯಾವ ರೀತಿಯಲ್ಲಿ ಸ್ಪಂದಿಸುತ್ತದೆ ಎಂಬುದು ಕಾದು ನೋಡಬೇಕಾಗಿದೆ.
“ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಡಾ. ಚಂದ್ರು ಲಮಾಣಿ, ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಯಾರೂ ಸ್ಪಂದಿಸುತ್ತಿಲ್ಲ. ಗುತ್ತಿಗೆದಾರನ ವಿರುದ್ಧ ಕ್ರಮ ಜರುಗಿಸಿ, ಕಾಮಗಾರಿ ತಕ್ಷಣ ಪೂರ್ಣಗೊಳಿಸಬೇಕು. ಈ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆಯೇ ಎಂಬುದನ್ನು ಸರ್ಕಾರ ತನಿಖೆ ನಡೆಸಬೇಕು.”
ಫಕೀರೇಶ, ವಸಂತಗೌಡ ಪಾಟೀಲ ಹಾಗೂ ಗ್ರಾಮಸ್ಥರು



